ʼಧರ್ಮಸ್ಥಳʼ ಸಾವಿನ ಪ್ರಕರಣಗಳ ಬಗ್ಗೆ ವಿಸ್ತೃತ ತನಿಖೆಗೆ ರಾಜ್ಯ ಮಹಿಳಾ ಆಯೋಗ ಆಗ್ರಹ

ಬೆಳ್ತಂಗಡಿ, ಜುಲೈ 14, 2025: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಹೆಣಗಳ ಶವಗಳನ್ನು ಹೂತಿರುವ ಆರೋಪದ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ವಿಶೇಷ ತನಿಖಾ ತಂಡ (SIT) ರಚಿಸುವಂತೆ ಕೋರಿದ್ದಾರೆ. ಈ ಬಗ್ಗೆ ಸಾಕ್ಷಿ ದೂರುದಾರರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ.

ಸಾಕ್ಷಿ ದೂರುದಾರ ಇತ್ತೀಚೆಗೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದರೂ, ತನಿಖೆಯಲ್ಲಿ ಯಾವುದೇ ಪ್ರಗತಿ ಸಿಗದ ಕಾರಣ ಮಹಿಳಾ ಆಯೋಗ ಈ ವಿಚಾರವನ್ನು ಗಮನಕ್ಕೆ ತಂದಿದೆ. ಆಯೋಗವು ಸೂಕ್ತ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಬೇಕೆಂದು ಒತ್ತಾಯಿಸಿದೆ. ಇದೇ ರೀತಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಏಳು ದಿನಗಳೊಳಗೆ ಘಟನೆಯ ವರದಿ ಸಲ್ಲಿಸುವಂತೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪತ್ರದ ಪ್ರಮುಖ ಅಂಶಗಳು:

ಒಬ್ಬ ವ್ಯಕ್ತಿ ನ್ಯಾಯಾಲಯದಲ್ಲಿ ಧರ್ಮಸ್ಥಳ ಪ್ರದೇಶದಲ್ಲಿ ನೂರಾರು ಶವಗಳನ್ನು ಹೂತಿರುವ ಬಗ್ಗೆ ಹೇಳಿಕೆ ನೀಡಿದ್ದಾರೆ. ಜುಲೈ 7ರಂದು ಟೈಮ್ಸ್ ನೌ ಮತ್ತಿತರ ಮಾಧ್ಯಮಗಳು ಒಬ್ಬರ ತಲೆಬುರುಡೆ ದೊರಕಿದ ಬಗ್ಗೆ ಮತ್ತು ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದ ಹೇಳಿಕೆಯನ್ನು ಪ್ರಸಾರ ಮಾಡಿದ್ದು, ಇದನ್ನು ಆಯೋಗ ಗಂಭೀರವಾಗಿ ಪರಿಗಣಿಸಿದೆ. ಈ ವರದಿಗಳು ಕಳೆದ 20 ವರ್ಷಗಳಲ್ಲಿ ಗಂಭೀರ ದೌರ್ಜನ್ಯ, ಹತ್ಯೆ, ಅತ್ಯಾಚಾರ, ಅಸ್ವಾಭಾವಿಕ ಸಾವು ಮತ್ತು ನಾಪತ್ತೆ ಪ್ರಕರಣಗಳು ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ಮೇಲೆ ನಡೆದಿರಬಹುದೆಂದು ಸೂಚಿಸುತ್ತವೆ.

ಅನೇಕ ಕುಟುಂಬಗಳು ತಮ್ಮ ಮಕ್ಕಳ ನಾಪತ್ತೆ ಮತ್ತು ಸಾವಿನ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದಾಗ ಸಿಬ್ಬಂದಿಗಳು ಸರಿಯಾಗಿ ಸ್ಪಂದಿಸಿಲ್ಲ ಎಂಬ ಆರೋಪವೂ ಇದೆ. ಆದ್ದರಿಂದ, ಕಳೆದ 20 ವರ್ಷಗಳಲ್ಲಿ ಧರ್ಮಸ್ಥಳ ಪ್ರದೇಶದಲ್ಲಿ ನಾಪತ್ತೆಯಾದ ಮಹಿಳೆಯರು, ವಿದ್ಯಾರ್ಥಿನಿಯರು, ಅಸ್ವಾಭಾವಿಕ ಸಾವು/ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳ ಬಗ್ಗೆ ಸಮಗ್ರ ತನಿಖೆಗಾಗಿ ವಿಶೇಷ ತಂಡ ರಚಿಸಬೇಕೆಂದು ಆಯೋಗದ ಅಧ್ಯಕ್ಷೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ 7 ದಿನಗಳ ವರದಿ ಆದೇಶ:

ಪತ್ರದಲ್ಲಿ, ಧರ್ಮಸ್ಥಳ ಪ್ರದೇಶದಲ್ಲಿ ಶವಗಳ ಹೂತಿಗೆ ಸಂಬಂಧಿಸಿ ಒಬ್ಬ ವ್ಯಕ್ತಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ ಬಗ್ಗೆ ಉಲ್ಲೇಖವಿದೆ. ಕಳೆದ 20 ವರ್ಷಗಳಲ್ಲಿ ಎಷ್ಟು ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ, ಎಷ್ಟು ಜನರನ್ನು ಪತ್ತೆ ಮಾಡಲಾಗಿದೆ, ಪತ್ತೆಯಾಗದ ಪ್ರಕರಣಗಳ ಸಂಖ್ಯೆ, ಅಸ್ವಾಭಾವಿಕ ಸಾವು/ಕೊಲೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮಗಳು ಮತ್ತು ಅತ್ಯಾಚಾರ ಪ್ರಕರಣಗಳ ವಿವರಗಳನ್ನು, ಈ ಪತ್ರ ಸ್ವೀಕರಿಸಿದ 7 ದಿನಗಳೊಳಗೆ ಮಹಿಳಾ ಆಯೋಗಕ್ಕೆ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ.

Comments

Leave a Reply

Your email address will not be published. Required fields are marked *