ಧರ್ಮಸ್ಥಳ ಪ್ರಕರಣ: ಎಸ್‌ಐಟಿ ಸೇರಲು ಇಬ್ಬರು ಅಧಿಕಾರಿಗಳು ಹಿಂದೇಟು?

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವರ್ಗಾಯಿಸಿ ರಾಜ್ಯ ಸರ್ಕಾರ ಶನಿವಾರ (ಜು.19) ಆದೇಶಿಸಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ 39/2025 ಕಲಂ 211(ಎ) ಬಿಎನ್‌ಎಸ್, ಈ ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ ಎಂದು ಸರ್ಕಾರದ ಆದೇಶ ತಿಳಿಸಿದೆ.

ಮೇಲೆ ಉಲ್ಲೇಖಿಸಿದ ಪ್ರಕರಣ ಮಾತ್ರವಲ್ಲದೆ, ಅದಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಎಸ್‌ಐಟಿಗೆ ವರ್ಗಾಯಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಂತಿ ಅವರ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದ್ದು, ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರ್ದೇಶಕ ಎಂ.ಎನ್‌ ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತೆ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತಂಡದ ಸದಸ್ಯರಾಗಿದ್ದಾರೆ.

ಈ ನಡುವೆ ಎಸ್‌ಐಟಿಯಿಂದ ಅಧಿಕಾರಿಗಳಾದ ಎಂ.ಎನ್‌ ಅನುಚೇತ್ ಮತ್ತು ಸೌಮ್ಯಲತಾ ಅವರು ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ ಎಂದು ಮಾಧ್ಯಮದಲ್ಲಿ ವರದಿಯಾಗಿತ್ತು.

ಎಸ್‌ಐಟಿ ತಂಡದಿಂದ ಯಾವ ಅಧಿಕಾರಿಗಳೂ ಹಿಂದೆ ಸರಿದಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ

ಧರ್ಮ‍ಸ್ಥಳದಲ್ಲಿ ಸರಣಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಎಸ್‌ಐಟಿ ತಂಡದಿಂದ ಯಾವ ಅಧಿಕಾರಿಗಳೂ ಕೂಡ ಹಿಂದೆ ಸರಿದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಎಸ್‌ಐಟಿ ತಂಡದಿಂದ ಕೆಲವು ಅಧಿಕಾರಿಗಳು ವೈಯಕ್ತಿಕ ಕಾರಣದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, “ಆ ರೀತಿಯ ಯಾವುದೇ ಬೆಳವಣಿಗೆ ನಡೆದಿಲ್ಲ. ಅವರೆಲ್ಲ ಜಬಾಬ್ದಾರಿಯುತ ಸ್ಥಾನದಲ್ಲಿರುವ ಹಿರಿಯ ಅಧಿಕಾರಿಗಳು, ಅವರು ತಮ್ಮ ಕೆಲಸವನ್ನು ಮಾಡುತ್ತಾರೆ. ನನಗಾಗಲಿ, ಸರಕಾರಕ್ಕಾಗಲಿ ನಾವು ಬರುವುದಿಲ್ಲ ಎಂದು ಅವರು ಹೇಳಿಲ್ಲ” ಎಂದು ಸ್ಪಷ್ಟಪಡಿಸಿದರು.

Comments

Leave a Reply

Your email address will not be published. Required fields are marked *