Category: Udupi

  • ಲಿಂಗಾನುಪಾತದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ: ಜಿಲ್ಲಾಧಿಕಾರಿ ವಿದ್ಯಾಕುಮಾರಿ

    ಉಡುಪಿ: ಗಂಡು ಮಕ್ಕಳು ಹಾಗೂ ಹೆಣ್ಣು ಮಕ್ಕಳ ಲಿಂಗಾನುಪಾತದಲ್ಲಿ ಉಡುಪಿ ಜಿಲ್ಲೆ ಸದ್ಯ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಸದ್ಯ 1000 ಗಂಡು ಮಕ್ಕಳಿಗೆ 978 ಹೆಣ್ಣು ಮಕ್ಕಳಿದ್ದಾರೆ. ಹೆಣ್ಣು ಮಕ್ಕಳ ಪ್ರಮಾಣ ಇನ್ನೂ ಹೆಚ್ಚಾಗಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

    ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆಯ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

  • ಉಡುಪಿ: ಚಲಿಸುತ್ತಿದ್ದ ಲಾರಿಯಿಂದ ಹೆದ್ದಾರಿಗೆ ಉರುಳಿ ಬಿದ್ದ ಟ್ಯಾಂಕ್: ಕೆಲಹೊತ್ತು ಸಂಚಾರ ಅಸ್ತವ್ಯಸ್ತ

    ಉಡುಪಿ: ಚಲಿಸುತ್ತಿದ್ದ ಲಾರಿಯಿಂದ ಟ್ಯಾಂಕ್ ರಸ್ತೆಗೆ ಉರುಳಿಬಿದ್ದ ಘಟನೆ ಉಡುಪಿ ಕಿನ್ನಿಮುಲ್ಕಿ ಜಂಕ್ಷನ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.

    ಬೃಹತ್ ಗಾತ್ರದ ಟ್ಯಾಂಕ್ ಹೆದ್ದಾರಿಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಹೆದ್ದಾರಿ ಪಕ್ಕದಲ್ಲಿ ಹಾಕುವ ಸೂಚನಾ ಫಲಕ ಅಡ್ಡ ಬಂದ ಕಾರಣ ಟ್ಯಾಂಕ್ ಹೊತ್ತ ಲಾರಿಗೆ ಮುಂದೆ ಸಾಗಲು ಸಾಧ್ಯವಾಗಿಲ್ಲ.

    ಎರಡು ದಿನ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಚಾಲಕ, ಲಾರಿಯನ್ನು ರಿವರ್ಸ್ ತೆಗೆದು ಬೇರೆ ರೂಟ್ ನಲ್ಲಿ ಹೋಗಲು ಪ್ರಯತ್ನ ಮಾಡಿದ್ದಾನೆ. ಈ ಸಂದರ್ಭ ಬಾರಿ ಗಾತ್ರದ ಟ್ಯಾಂಕ್ ರಸ್ತೆಗೆ ಉರುಳಿದೆ. ಉಡುಪಿ ಟ್ರಾಫಿಕ್ ಪೊಲೀಸರು ಲಾರಿ ಚಾಲಕನಿಗೆ ಕೂಡಲೇ ತೆರವು ಮಾಡುವಂತೆ ಸೂಚನೆ ನೀಡಿದ್ದಾರೆ.

  • ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಶಾಂತಿ ಸಭೆ

    ಉಡುಪಿ, ಜೂನ್ 05, 2025: ಇಂದು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಶಾಂತಿಯುತ ವಾತಾವರಣ ಕಾಪಾಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಾದ ಶ್ರೀ ಹರಿರಾಮ್ ಶಂಕರ್ ಐಪಿಎಸ್ ರವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು. ಈ ಸಭೆಯಲ್ಲಿ ಧಾರ್ಮಿಕ ಮುಖಂಡರನ್ನು ಆಹ್ವಾನಿಸಿ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಕುರಿತು ಚರ್ಚೆ ನಡೆಸಲಾಯಿತು.

    ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಎಲ್ಲಾ ಉಪವಿಭಾಗಾಧಿಕಾರಿಗಳು, ವೃತ್ತ ನಿರೀಕ್ಷಕರು ಹಾಗೂ ಠಾಣೆಯ ಉಪನಿರೀಕ್ಷಕರು ಭಾಗವಹಿಸಿದ್ದರು. ಬಕ್ರೀದ್ ಹಬ್ಬವನ್ನು ಸಾಮರಸ್ಯದಿಂದ ಆಚರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಗಳನ್ನು ನೀಡಲಾಯಿತು.

  • ಉಪನ್ಯಾಸಕರ ಹುದ್ದೆ : ಅರ್ಜಿ ಆಹ್ವಾನ

    ಉಡುಪಿ, ಜೂನ್ 05, 2025: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಕಾರ್ಕಳ ತಾಲೂಕು ಮಿಯ್ಯಾರು ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಆಂಗ್ಲಭಾಷೆ, ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ಹಾಗೂ ಬ್ರಹ್ಮಾವರ ತಾಲೂಕು ಆರೂರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಗಣಿತ, ಜೀವಶಾಸ್ತ್ರ ಮತ್ತು ಗಣಕ ವಿಜ್ಞಾನ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಮಿಯ್ಯಾರು ಕಾಲೇಜು ಪ್ರಾಂಶುಪಾಲರು ಮೊ.ನಂ: 7337795963 ಹಾಗೂ ಆರೂರು ಕಾಲೇಜು ಪ್ರಾಂಶುಪಾಲರು ಮೊ.ನಂ: 7012988065 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

  • ಡಿಪ್ಲೋಮಾ ಪ್ರವೇಶಾತಿ : ಅವಧಿ ವಿಸ್ತರಣೆ

    ಉಡುಪಿ, ಜೂನ್ 05, 2025: ಪ್ರಸಕ್ತ ಸಾಲಿನಲ್ಲಿ ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 30 ರ ವರೆಗೆ ವಿಸ್ತರಿಸಲಾಗಿದೆ ಹಾಗೂ ಐ.ಟಿ.ಐ, ದ್ವಿತೀಯ ಪಿ.ಯು.ಸಿ ವಿಜ್ಞಾನ ಅಥವಾ ದ್ವಿತೀಯ ಪಿ.ಯು.ಸಿ ತಾಂತ್ರಿಕ ವಿಷಯಗಳಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಲ್ಯಾಟರಲ್ ಎಂಟ್ರಿ ಮೂಲಕ ನೇರವಾಗಿ ಮೂರನೇ ಸೆಮಿಸ್ಟರ್ಗೆ ಪ್ರವೇಶ ಪಡೆಯುವ ಸಲುವಾಗಿ ಅರ್ಜಿ ಸಲ್ಲಿಸಲು ಜೂನ್ 14 ಕೊನೆಯ ದಿನವಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ದೂ.ಸಂಖ್ಯೆ : 0820-2570244 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.

  • ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ

    ಉಡುಪಿ, ಜೂನ್ 05, 2025 : ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ 2024 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.

    ಲೇಖಕರು, ಪ್ರಕಾಶಕರು ಹಾಗೂ ಸಾಹಿತ್ಯಾಸಕ್ತ ಸಾರ್ವಜನಿಕರು ಬಹುಮಾನಕ್ಕಾಗಿ ಪುಸ್ತಕದ ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು ವಿಳಾಸಕ್ಕೆ ರಿಜಿಸ್ಟರ್ಡ್ ಅಂಚೆ / ಕೊರಿಯರ್ ಮೂಲಕ ಅಥವಾ ಖುದ್ದಾಗಿ ಜುಲೈ 15 ರ ಒಳಗಾಗಿ ತಲುಪಿಸಬಹುದಾಗಿದೆ. 

    ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್ಸೈಟ್ https://www.sahithyaacademy.karnataka.gov.in/ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಉಡುಪಿಯಲ್ಲಿ ದುರಂತ: ಒಂದು ವರ್ಷದ ಮಗುವಿನ ದಾರುಣ ಸಾವು

    ಉಡುಪಿ, ಜೂನ್ 05, 2025: ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ನಿಟ್ಟೂರಿನಲ್ಲಿ ವಾಸಿಸುತ್ತಿದ್ದ ಪಿರ್ಯಾದಿದಾರ ಅಯ್ಯಪ್ಪ (27), ಕಳೆದ ಮೂರು ವರ್ಷಗಳಿಂದ ಉಡುಪಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಗಂಗಾಧರ ಎಂಬವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ದಿನಾಂಕ 04/06/2025 ರಂದು ಬೆಳಿಗ್ಗೆ 8 ಗಂಟೆಗೆ ಕೆಲಸಕ್ಕೆ ತೆರಳಿದ ಅಯ್ಯಪ್ಪ, ತಮ್ಮ ಒಂದು ವರ್ಷದ ಮಗುವನ್ನು ಜೋಲಿಯಲ್ಲಿ ಮಲಗಿಸಿ, ಹೆಂಡತಿಯೊಂದಿಗೆ ಬೆಳಿಗ್ಗೆ 9:30 ಗಂಟೆಗೆ ಕೆಲಸಕ್ಕೆಂದು ಮನೆಯಿಂದ ಹೊರಟಿದ್ದರು.

    ಮಧ್ಯಾಹ್ನ 11:30 ಗಂಟೆಗೆ ಮನೆಗೆ ವಾಪಸ್ ಬಂದಾಗ, ಮಗುವಿನ ಕುತ್ತಿಗೆಗೆ ಜೋಲಿಗೆ ಕಟ್ಟಿದ್ದ ಸೀರೆ ಸುತ್ತಿಕೊಂಡು ನೇತಾಡುವ ಸ್ಥಿತಿಯಲ್ಲಿ ಕಂಡುಬಂದಿದೆ. ತಕ್ಷಣ ಮಗುವನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ಕರೆದೊಯ್ದಾಗ, ವೈದ್ಯಾಧಿಕಾರಿಗಳು ಮಗು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಮಗು ಜೋಲಿಯಿಂದ ಇಳಿಯಲು ಯತ್ನಿಸುವಾಗ ಅಥವಾ ನಿದ್ರೆಯ ಸ್ಥಿತಿಯಲ್ಲಿ ಜೋಲಿಯಿಂದ ಬಿದ್ದು, ಸೀರೆ ಕುತ್ತಿಗೆಗೆ ಸುತ್ತಿಕೊಂಡು ಉಸಿರುಕಟ್ಟಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

    ಈ ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 53/2025, ಕಲಂ 194 BNSS ರಂತೆ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.

  • ಉಡುಪಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಭೇದ: ಇಬ್ಬರು ಆರೋಪಿಗಳ ಮೊಬೈಲ್‌ಗಳ ಸ್ವಾಧೀನ

    ಉಡುಪಿ, ಜೂನ್ 05, 2025: ಶಿವಳ್ಳಿ ಗ್ರಾಮದ ಪಿ.ಪಿ.ಸಿ ಕಾಲೇಜು ಸಮೀಪದ ಶಕ್ತಿಶೀ ಎಂಬಲ್ಲಿ ಎಂ. ರಾವ್‌ ಎಂಬವರ ಬಾಡಿಗೆ ಮನೆಯಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌ನ ಅಕ್ರಮ ದಂಧೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಸೆನ್‌ ಅಪರಾಧ ಪೊಲೀಸ್‌ ಠಾಣೆಯ ಪೊಲೀಸ್‌ ನಿರೀಕ್ಷಕ ರಾಮಚಂದ್ರ ನಾಯಕ್‌, ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

    ತನಿಖೆಯಲ್ಲಿ, ಅನಂತ ಪಿ. ಎಂಬಾತ ತನ್ನ Oppo F27 Pro Plus 5G ಫೋನ್‌ ಮೂಲಕ LORD***** ಎಂಬ ವೆಬ್‌ಸೈಟ್‌ನಲ್ಲಿ ಅಕ್ರಮವಾಗಿ ಕ್ರಿಕೆಟ್‌ ಬೆಟ್ಟಿಂಗ್‌ ದಂಧೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯುವ ಪಂಜಾಬ್‌ ಕಿಂಗ್ಸ್‌ (PBKS) ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡಗಳ ನಡುವಿನ IPL T20 ಕ್ರಿಕೆಟ್‌ ಪಂದ್ಯಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಬೆಟ್ಟಿಂಗ್‌ ನಡೆಸುತ್ತಿದ್ದ ಎಂದು ತಿಳಿದುಬಂದಿದೆ.

    ಅನಂತ ಪಿ., ಸಿದ್ದಾರ್ಥ ಎಂಟರ್‌ಪ್ರೈಸಸ್‌ನಿಂದ LORD***** ವೆಬ್‌ಸೈಟ್‌ಗೆ ಯೂಸರ್‌ ಐಡಿ ಮತ್ತು ಪಾಸ್‌ವರ್ಡ್‌ ಪಡೆದು, ನಂತರ ಪಾಸ್‌ವರ್ಡ್‌ ಅನ್ನು ಬದಲಾಯಿಸಿಕೊಂಡು, ವಾಟ್ಸ್‌ಆಪ್‌ ಚಾಟ್‌ ಮೂಲಕ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ. ಈ ಹಣವನ್ನು ಸಿದ್ದಾರ್ಥ ಎಂಟರ್‌ಪ್ರೈಸಸ್‌ನ ಬ್ಯಾಂಕ್‌ ಖಾತೆ ಮತ್ತು ಫೋನ್‌ಪೇ ಮೂಲಕ ಪಣವಾಗಿಟ್ಟುಕೊಂಡಿದ್ದ. ಇದಕ್ಕಾಗಿ ತನ್ನ ಉಡುಪಿ ಮೈತ್ರಿ ಕಾಂಪ್ಲೇಕ್ಸ್‌ ಬ್ರಾಂಚ್‌ನ ಎಸ್‌ಬಿಐ ಬ್ಯಾಂಕ್‌ ಖಾತೆಯನ್ನು ಬಳಸಿದ್ದಾನೆ. ಜೊತೆಗೆ, ಬೆಟ್ಟಿಂಗ್‌ನಿಂದ ಬರಬೇಕಾದ ಲಾಭಾಂಶವನ್ನು ಆತನ ಪತ್ನಿ ವಾಣಿಶ್ರೀ ಅವರ ಎಸ್‌ಬಿಐ ಖಾತೆಗೆ ಜಮಾ ಮಾಡಲಾಗುತ್ತಿತ್ತು.

    ಪೊಲೀಸರು ಅನಂತ ಮತ್ತು ವಾಣಿಶ್ರೀ ಅವರ ಒಟ್ಟು ಎರಡು ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆನ್‌ ಅಪರಾಧ ಠಾಣೆಯಲ್ಲಿ ಕ್ರಮಾಂಕ 24/2025, ಕಲಂ 78 KP ACT ಮತ್ತು 112 BNS ರಂತೆ ಪ್ರಕರಣ ದಾಖಲಾಗಿದೆ.

  • ಹೊನ್ನಾಳ: 20ನೇ ವರ್ಷದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ – ಮುಂದೂಡಿಕೆ

    ಹೊನ್ನಾಳ, ಜೂನ್ 4, 2025: ಕರ್ನಾಟಕ ಮುಸ್ಲಿಂ ಜಮಾತ್‌ನ ಹೊನ್ನಾಳ ಶಾಖೆಯ ಮಾರ್ಗದರ್ಶನದಲ್ಲಿ, ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (SSF) ಹೊನ್ನಾಳ ಶಾಖೆಯ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೊನ್ನಾಳದ ಸರ್ವ ವಿದ್ಯಾರ್ಥಿಗಳಿಗೆ 20ನೇ ವರ್ಷದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

    • ಸ್ಥಳ: ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣ, ಹೊನ್ನಾಳ

    ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್‌ಗಳನ್ನು ವಿತರಿಸಲಾಗುವುದು. ಈ ಉಪಕ್ರಮವು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ, ಇದು ಸಮುದಾಯ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ನೀಡುವ ಗುರಿಯನ್ನು ಹೊಂದಿದೆ. ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಆಗಮಿಸಿ, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಆಯೋಜಕರು ಕೋರಿದ್ದಾರೆ.

  • ಉಡುಪಿ: ಬಕ್ರೀದ್ ಹಿನ್ನಲೆ, ಅನಧಿಕೃತ ಜಾನುವಾರು ವಧೆ, ಸಾಗಾಣಿಕೆ ಕಂಡುಬಂದಲ್ಲಿ ಕಾನೂನು ಕ್ರಮ – ಡಿಸಿ

    ಉಡುಪಿ, ಜೂನ್ 03, 2025: ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ಮಾಡುವುದನ್ನು ತಡೆಗಟ್ಟಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಮಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

    ಅವರು ಇಂದು ಉಡುಪಿ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬ ಆಚರಣೆ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ನಡೆದ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

    ಜಿಲ್ಲೆಯಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆ ಮಾಡುತ್ತಿರುವುದು ಕಂಡುಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಧಿಕೃತ ಜಾನುವಾರು ಸಾಗಾಣಿಕೆ ಮಾಡಬೇಕಾದ ಸಂದರ್ಭದಲ್ಲಿ ಪಶುಸಂಗೋಪನಾ ಇಲಾಖೆ ನಿಗದಿಪಡಿಸಿದ ನಮೂನೆಯಲ್ಲಿ ಅನುಮತಿ ಹಾಗೂ ಆ ವ್ಯಾಪ್ತಿಯ ಪೋಲಿಸ್ ಠಾಣೆಗಳ ಅನುಮತಿ ಪಡೆಯುವುದು ಕಡ್ಡಾಯ ಎಂದರು.

    ಬಕ್ರೀದ್ ಹಬ್ಬದ ಸಂದರ್ಭದಲ್ಲಿ ದನ, ಎಮ್ಮೆ, ಕರು ಹಾಗೂ ಒಂಟೆಗಳನ್ನು ಅಕ್ರಮವಾಗಿ ದಾಸ್ತಾನು ಸಾಗಾಣಿಕೆ ಹಾಗೂ ವಧೆ ಮಾಡುವ ಸಾಧ್ಯತೆ ಇರುವುದರಿಂದ ಇವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ವಿವಿಧ ಅಧಿಕಾರಿಗಳನ್ನು ಒಳಗೊಂಡ ತಪಾಸಣಾ ತಂಡಗಳನ್ನು ರಚಿಸಲಾಗಿದೆ. ಇದಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿಕೊಂಡು ತಮ್ಮ ಕಾರ್ಯಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಪ್ರವೃತ್ತರಾಗಿರಬೇಕು ಎಂದ ಅವರು, ತಾಲೂಕು ಮಟ್ಟದಲ್ಲಿ ರಚಿಸಲಾಗಿರುವ ತಂಡಗಳು ಸಭೆ ಸೇರಿ, ಇವುಗಳ ನಿಯಂತ್ರಣ ಕಾರ್ಯದ ಬಗ್ಗೆ ಚರ್ಚಿಸಿ, ಕ್ರಮವಹಿಸಬೇಕು ಎಂದರು.

    ಅನಧಿಕೃತ ಜಾನುವಾರು ಸಾಗಾಣಿಕೆಯಲ್ಲಿ ವಶಪಡಿಸಿಕೊಂಡ ಜಾನುವಾರುಗಳನ್ನು ಸಂರಕ್ಷಿಸಿ, ಹತ್ತಿರದ ಗೋಶಾಲೆಗೆ ಬಿಡಲು ಸಮೀಪದ ಗೋಶಾಲೆಗಳನ್ನು ಗುರುತಿಸುವಂತೆ ಹಾಗೂ ವಶಪಡಿಸಿಕೊಂಡ ಜಾನುವಾರುಗಳಿಗೆ ಅಗತ್ಯವಿರುವ ಚಿಕಿತ್ಸೆಯನ್ನು ನೀಡಲು ಪಶುವೈದ್ಯಾಧಿಕಾರಿಗಳು ಸನ್ನದ್ಧರಾಗಿರಬೇಕು ಹಾಗೂ ಜಾನುವಾರುಗಳಿಗೆ ಅಗತ್ಯವಿರುವ ಮೇವು ಮತ್ತು ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

    ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಮತ್ತು ಸೌಹಾರ್ದಯುತವಾಗಿ ನಡೆಯಬೇಕು. ತಾಲೂಕು ಮಟ್ಟದಲ್ಲಿ ತಹಶೀಲ್ದಾರರುಗಳು ಶಾಂತಿ ಸಭೆಗಳನ್ನು ನಡೆಸಬೇಕು. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿಯುತವಾಗಿ ಬಕ್ರೀದ್ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಎಲ್ಲಾ ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

    ಜಿಲ್ಲಾ ಪೋಲಿಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾತನಾಡಿ, “ಜಿಲ್ಲಾದ್ಯಂತ ತಪಾಸಣಾ ಕೇಂದ್ರಗಳು ದಿನದ 24 ಗಂಟೆ ಕಾರ್ಯನಿರ್ವಹಿಸಲಿದೆ. ಸದ್ರಿ ಕೇಂದ್ರಗಳು ಜಾನುವಾರು ಸಾಗಾಣಿಕೆ ಮಾಡುವ ಕುರಿತು ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಕಾನೂನು ಉಲ್ಲಂಘನೆ ಮಾಡಿ ಜಾನುವಾರು ಸಾಗಾಣಿಕೆ ಮಾಡಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದರು.

    ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ನಗರಸಭೆ ಆಯುಕ್ತ ಮಹೇಶ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.