ಉಡುಪಿ: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಕ್ರೋಢೀಕರಿಸಲು ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಯಲಿದೆ.
ಮೂರು ಹಂತದಲ್ಲಿ ಸಮೀಕ್ಷೆ ನಡೆಯಲಿದ್ದು, ಪರಿಶಿಷ್ಟ ಜಾತಿಯವರ ಮನೆಗಳಿಗೆ ಮಾತ್ರ ಭೇಟಿ ನೀಡಿ ವಿವರ ಪಡೆಯಲಾಗುವುದು. ಮೇ 5ರಿಂದ 17ರವರೆಗೆ ಮನೆ ಮನೆ ಸಮೀಕ್ಷೆ, ಮೇ 19ರಿಂದ 21ರ ವರೆಗೆ ಅಲ್ಲಲ್ಲಿ ಕ್ಯಾಂಪ್ ಮಾಡಿ ದಾಖಲೀಕರಣ ಹಾಗೂ ಮೂರನೇ ಹಂತದಲ್ಲಿ ಆನ್‌ಲೈನ್ ಮೂಲಕ ನಮೂದು ಕಾರ್ಯ ನಡೆಯಲಿದೆ. 2011ರ ಸಮೀಕ್ಷೆ ಪ್ರಕಾರ ಜಿಲ್ಲೆಯಲ್ಲಿ 75 ಸಾವಿರ ಪ.ಜಾತಿ ಜನಸಂಖ್ಯೆಯಿದ್ದು, ನಿರ್ದಿಷ್ಟ ಕಾಲಮಿತಿಯಲ್ಲಿ ಸಮೀಕ್ಷೆ ಪೂರ್ಣಗೊಳಿಸಲು ಯೋಜಿಸಲಾಗಿದೆ.
ಜಿಲ್ಲೆಯ ಮಾಸ್ಟರ್ ಟ್ರೈನರ್‌ಗಳಿಂದ 35 ತಾಲೂಕು ಮಟ್ಟದ ಟ್ರೈನರ್‌ಗಳಿಗೆ ತರಬೇತಿ ನೀಡಲಾಗಿದೆ. 1112 ಶಿಕ್ಷಕರು ಹಾಗೂ 112 ಮೇಲ್ವಿಚಾರಕರು ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವರು. ಸಮೀಕ್ಷೆ ಕುರಿತ ಮಾಹಿತಿಗೆ 9480843046, ಸಹಾಯವಾಣಿಗೂ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.
ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಸಹಿತ ಯಾವುದಾದರೂ ಒಂದು ದಾಖಲೆ ನೀಡಬೇಕು. ರಾಷ್ಟ್ರಪತಿಗಳಿಂದ ಅನುಮೋದನೆ ಪಡೆದಿರುವ 101 ಜಾತಿಗಳ ಪಟ್ಟಿಯನ್ನು ಸಿದ್ಧಪಡಿಸಿ ಸರಕಾರವೇ ನೀಡಿದೆ. ಮೊಬೈಲ್ ಆ್ಯಪ್ ಮೂಲಕ ಸರ್ವೆ ನಡೆಯಲಿದ್ದು ಸಮೀಕ್ಷೆಗೆ ಸಂಬಂಧಿಸಿದ ಎಲ್ಲ ಮಾಹಿತಿ ನೀಡಿದೆ.