ಮಡಿಕೇರಿ, ಜೂನ್ 05, 2025: ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆಹಾಡಿ ಸಮುದಾಯ ಭವನದ ಬಳಿಯ ತೋಟದಲ್ಲಿ ನವಜಾತ ಹೆಣ್ಣು ಶಿಶುವಿನ ಕಳೇಬರ ಪತ್ತೆಯಾಗಿದೆ. ಜನನವಾದ ಕೆಲವೇ ಗಂಟೆಗಳಲ್ಲಿ ಶಿಶುವನ್ನು ತೋಟದಲ್ಲಿ ಬಿಟ್ಟು ಹೋಗಲಾಗಿದ್ದು, ನಾಯಿಗಳು ಎಳೆದಾಡುತ್ತಿರುವ ದೃಶ್ಯ ಕಂಡುಬಂದಿದೆ.
ಗ್ರಾಮ ಪಂಚಾಯಿತಿ ಸದಸ್ಯ ಆರ್.ಕೆ. ಚಂದ್ರು ಸ್ಥಳಕ್ಕೆ ಭೇಟಿ ನೀಡಿ, ಸಂಬಂಧಿತ ಇಲಾಖೆಗಳಿಗೆ ಮಾಹಿತಿ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್, ತಾಲೂಕು ವೈದ್ಯಾಧಿಕಾರಿ ಡಾ. ಇಂದೂಧರ್, ಕುಶಾಲನಗರ ವೃತ್ತ ನಿರೀಕ್ಷಕ ದಿನೇಶ್ ಕುಮಾರ್, ಮತ್ತು ಗ್ರಾಮಾಂತರ ಠಾಣಾಧಿಕಾರಿ ಸ್ವಾಮಿ ಸ್ಥಳವನ್ನು ಪರಿಶೀಲಿಸಿ ಮಹಜರು ನಡೆಸಿದರು. ಕಳೇಬರವನ್ನು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. ಈ ಬಗ್ಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರ್.ಕೆ. ಚಂದ್ರು, ಶಿಶುವನ್ನು ಬಿಟ್ಟವರನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.