ಮಂಗಳೂರು, ಮೇ 30, 2025: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳತ್ತಮಜಲುವಿನಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಅಬ್ದುಲ್ ರಹೀಮ್ ಅವರ ಕುಟುಂಬಕ್ಕೆ ಎಸ್‌ಡಿಪಿಐ (ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ರಾಜ್ಯ ಸರ್ಕಾರದಿಂದ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.


ಅಬ್ದುಲ್ ಮಜೀದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿಕೊಂಡು, ಈ ಹತ್ಯೆ ಪ್ರಕರಣದ ತನಿಖೆಗಾಗಿ ಐಪಿಎಸ್ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಜೊತೆಗೆ, ಬಜಪೆ ಕಾರ್ಯಕ್ರಮದಲ್ಲಿ ಈ ಘಟನೆಗೆ ಪ್ರಚೋದನೆ ನೀಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಅಬ್ದುಲ್ ರಹೀಮ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೂ ತಂದಿದ್ದಾರೆ.
ಇದೇ ಸಂದರ್ಭದಲ್ಲಿ, ಹಂತಕರ ತಂಡದಿಂದ ತಲ್ವಾರ್ ದಾಳಿಗೊಳಗಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖಲಂದರ್ ಶಾಫಿಯನ್ನು ಭೇಟಿ ಮಾಡಿದ ಅಬ್ದುಲ್ ಮಜೀದ್ ಮತ್ತು SDPI ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜೆತೂರ್, ಅವರು, ಆತನ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.